ಬೆಂಗಳೂರು: ವಕೀಲರಿಗಾಗಿ ಸ್ಥಾಪನೆಯಾದ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಿಯಮಿತ, ತನ್ನ 25ನೇ ವರ್ಷದ ಬೆಳ್ಳಿ ಮಹೋತ್ಸವವನ್ನು ಅಕ್ಟೋಬರ್ 25, 2025 ರಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಆಯೋಜಿಸಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಲಿದ್ದು, ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಬ್ಯಾಂಕ್ನ ಅಧ್ಯಕ್ಷರಾದ ಎಸ್. ಯತಿರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಎರಡು ಭಾಗಗಳಲ್ಲಿ ಜರುಗಲಿದೆ. ಬೆಳಿಗ್ಗೆ 11:30ಕ್ಕೆ ಉದ್ಘಾಟನಾ ಸಮಾರಂಭ ಮತ್ತು ಸಂಜೆ 4:30ಕ್ಕೆ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮವು ಬ್ಯಾಂಕ್ನ 25 ವರ್ಷಗಳ "ನಂಬಿಕೆ ಮತ್ತು ಬೆಳವಣಿಗೆಯ" ಯಶೋಗಾಥೆಯನ್ನು ಸ್ಮರಿಸುವ ಗುರಿಯನ್ನು ಹೊಂದಿದೆ.
ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ವಿಭು ಬಾಕ್ರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮತ್ತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ಎಸ್ ಎಸ್ ಮಿಟ್ಟಲಕೋಡ ಹಾಗೂ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಅವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಆಂಧ್ರಪ್ರದೇಶದ ರಾಜ್ಯಪಾಲ ಮತ್ತು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್, ಸಂಸದ ಪಿ.ಸಿ. ಮೋಹನ್, ಹಾಗೂ ಅಡ್ವೊಕೇಟ್ ಜನರಲ್ ಕೆ. ಶಶಿ ಕಿರಣ್ ಶೆಟ್ಟಿ ಅವರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಬ್ಯಾಂಕ್ನ ಹಿರಿಯ ಸದಸ್ಯರು, ಮಾಜಿ ಅಧ್ಯಕ್ಷರು ಮತ್ತು ನಿರ್ದೇಶಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸಮಾರೋಪದ ನಂತರ, ಸಂಜೆ 6:30ಕ್ಕೆ "ಗಾನೋತ್ಸವ" ಎಂಬ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದರಲ್ಲಿ ಖ್ಯಾತ ಗಾಯಕರಾದ ಅನುರಾಧ ಭಟ್, ಶ್ವೇತಾ ಪ್ರಭು, ಮೋಹನ್ ಕೃಷ್ಣ, ಲಕ್ಷ್ಮಿ ವಿಜಯ್, ಚನ್ನಪ್ಪ ಹುದ್ದಾರ್, ದಿವ್ಯಾ ಹೆಗಡೆ, ದಾಮೋದರ್ ನಾಯಕ್ ಮತ್ತು ಅರುಣ್ ಕುಮಾರ್ ಹಾಗೂ ತಂಡದವರು ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.